ಸಿನಿಮಾ: ನಾಯಂಡಳ್ಳಿ ಜಂಕ್ಷನ್ ನಿಂದ ಬನ್ನೇರುಘಟ್ಟ ವರೆಗಿನ ರಸ್ತೆಗೆ ಕರ್ನಾಟಕ ರತ್ನ ಪುನೀತ್ ರಾಜ್ ಕುಮಾರ್ ಹೆಸರಿಡಬೇಕು ಎಂಬ ಬೇಡಿಕೆ ಈಡೇರಿದೆ. ಪುನೀತ್ ರಾಜ್ ಕುಮಾರ್ ರಸ್ತೆ ಎಂದು ಹೆಸರಿಡಲು ಮುಖ್ಯಮಂತ್ರಿಗಳು ಅನುಮೋದನೆ ನೀಡಿದ್ದು, ನಾಳೆ ಪದ್ಮನಾಭನಗರದಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಪುನೀತ್ ರಾಜ್ ಕುಮಾರ್ ರಸ್ತೆ ನಾಮಕರಣಕ್ಕೆ ಚಾಲನೆ ನೀಡಲಿದ್ದಾರೆ.
![](https://maxmediakannada.in/wp-content/uploads/2023/02/image-1.png)
ಈ ಬಗ್ಗೆ ಕಂದಾಯ ಸಚಿವ ಆರ್ ಅಶೋಕ್ ಪತ್ರಿಕಾಗೋಷ್ಠಿ ನಡೆಸಿ ಮಾಹಿತಿ ಹಂಚಿಕೊಂಡಿದ್ದಾರೆ. ಸಚಿವ ಆರ್ ಅಶೋಕ್ ಮಾತನಾಡಿ ಪುನೀತ್ ರಾಜ್ ಕುಮಾರ್ ಅವರು ನಮ್ಮ ಮಧ್ಯೆ ಇಲ್ಲ ಆದ್ರೆ ನಮ್ಮೆಲ್ಲರೊಳಗೆ ಆಳವಾಗಿ ನೆಲೆಸಿದ್ದಾರೆ. ಪುನೀತ್ ಹೃದಯವಂತ ಮನುಷ್ಯ. ಬಡವರ ಬಗ್ಗೆ, ವಿದ್ಯಾರ್ಥಿಗಳ ಬಗ್ಗೆ, ಅನಾಥಾಶ್ರಮಗಳ ಬಗ್ಗೆ ಅವರಿಗಿದ್ದ ಕಾಳಜಿ ಬಹಳ ವಿಶಾಲವಾದದ್ದು. ಅವರ ನೆನಪು ಮುಂದಿನ ಪೀಳಿಗೆಗೂ ತಲುಪಬೇಕು ಎಂಬ ದೃಷ್ಟಿಯಿಂದ ನಾಯಂಡಳ್ಳಿ ಜಂಕ್ಷನ್ ನಿಂದ ಬನ್ನೇರುಘಟ್ಟ ಮೆಗಾ ಸಿಟಿ ಮಾಲ್ ಜಂಕ್ಷನ್ ವರೆಗಿನ ರಸ್ತೆಗೆ ಕರ್ನಾಟಕ ರತ್ನ ಪುನೀತ್ ರಾಜ್ ಕುಮಾರ್ ರಸ್ತೆ ಎಂದು ನಾಮಕರಣ ಮಾಡಲು ಮುಖ್ಯಮಂತ್ರಿಗಳು ಅನುಮೋದನೆ ನೀಡಿದ್ದಾರೆ. 12 ಕಿಲೋ ಮೀಟರ್ ರಸ್ತೆಗೆ ಪುನೀತ್ ರಾಜ್ ಕುಮಾರ್ ರಸ್ತೆ ಎಂದು ಹೆಸರಿಡುತ್ತಿದ್ದೇವೆ ಎಂದು ಸಂತಸ ಹಂಚಿಕೊಂಡಿದ್ದಾರೆ.
ನಾಳೆ ಸಂಜೆ ಆರು ಗಂಟೆಗೆ ಪದ್ಮನಾಭನಗರದ ಅಟಲ್ ಬಿಹಾರಿ ವಾಜಪೇಯಿ ಮೈದಾನದಲ್ಲಿ ರಸ್ತೆ ನಾಮಕರಣ ಉದ್ಘಾಟನಾ ಕಾರ್ಯಕ್ರಮ ನಡೆಯಲಿದೆ. ಮುಖ್ಯಮಂತ್ರಿಗಳು ರಸ್ತೆ ನಾಮಕರಣ ಉದ್ಘಾಟನೆಯನ್ನು ಮಾಡಲಿದ್ದಾರೆ. ರಾಜ್ ಕುಮಾರ್ ಕುಟುಂಬ, ಸಚಿವರು, ಇಡೀ ಚಿತ್ರರಂಗದ ತಾರೆಯರು ಭಾಗಿಯಾಗಲಿದ್ದಾರೆ. ಕಾರ್ಯಕ್ರಮಕ್ಕೆ ಎಲ್ಲರಿಗೂ ಮುಕ್ತ ಅವಕಾಶವಿದೆ ಎಂದು ಸಚಿವ ಆರ್. ಅಶೋಕ್ ತಿಳಿಸಿದ್ದಾರೆ.
ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಭಾ.ಮ.ಹರೀಶ್, ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷ ಅಶೋಕ್ ಕಶ್ಯಪ್, ನಿರ್ದೇಶಕರ ಸಂಘದ ಖಜಾಂಚಿ ಉಮೇಶ್ ನಾಯ್ಕ್, ಕಲಾವಿದರ ಸಂಘದ ಕಾರ್ಯದರ್ಶಿ ರಾಕ್ ಲೈನ್ ವೆಂಕಟೇಶ್, ಸುಂದರ್ ರಾಜ್, ಸಿದ್ಧರಾಜು, ಜೈ ಜಗದೀಶ್, ಹಲವರು ಪತ್ರಿಕಾಗೋಷ್ಠಿಯಲ್ಲಿ ಹಾಜರಿದ್ದರು.